ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಮಗಳ ಪರೀಕ್ಷೆಯ ಕಾರಣ ನೀಡಿ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ 20 ದಿನಗಳ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಇತರ ಆರೋಪಿಗಳಿಗೂ ಮಕ್ಕಳಿದ್ದಾರೆ ಎಂದು ಅಭಿಪ್ರಾಯಪಟ್ಟ ಕೋರ್ಟ್, ದರ್ಶನ್ ಸೇರಿ ಏಳು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಬೆಂಗಳೂರು(ಫೆ.17) ಮಗಳಿಗೆ ಪರೀಕ್ಷೆಯಿರುವ ಹಿನ್ನೆಲೆಯಲ್ಲಿ 20 ದಿನ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮೊದಲ ಆರೋಪಿ ನಟಿ ಪವಿತ್ರಾಗೌಡ ಸಲ್ಲಿಸಿದ್ದ ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣದ ಬೇರೆ ಆರೋಪಿಗಳಿಗೂ ಮಕ್ಕಳಿದ್ದಾರೆ ಎಂದ ಕೋರ್ಟ್
ಪವಿತ್ರಾ ಗೌಡ ಅವರ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿತು. ಜಾಮೀನು ಕೋರಿ ಈ ಹಿಂದೆ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ಮಗಳಿಗೆ ಶಾಲಾ ಪರೀಕ್ಷೆ ಇರುವುದರಿಂದ ಮಗಳ ಜೊತೆ ಇರಲು 20 ದಿನ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಅರ್ಜಿಯಲ್ಲಿ ಮನವಿ ಮಾಡಿದ್ದರು. ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್, ಪ್ರಕರಣದ ಬೇರೆ ಆರೋಪಿಗಳಿಗೂ ಮಕ್ಕಳಿದ್ದಾರೆ. ಅವರು ಕೂಡ ಇದೇ ರೀತಿಯ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಕೋರುವ ಸಾಧ್ಯತೆಯಿದೆ ಎಂದು ವಾದಿಸಿದ್ದರು.
ನ್ಯಾಯಾಂಗ ಬಂಧನ ವಿಸ್ತರಣೆ:
ಪವಿತ್ರಾಗೌಡ, ನಟ ದರ್ಶನ್ ಸೇರಿ ಏಳು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದಲೇ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಉಳಿದಂತೆ ಜಾಮೀನು ಮೇಲಿರುವ ಆರು ಮಂದಿ ಆರೋಪಿಗಳು ಖುದ್ದು ಹಾಜರಾಗಿದ್ದರು. ನಾಲ್ವರು ಆರೋಪಿಗಳು ಗೈರಾಗಿದ್ದು, ವಿಚಾರಣೆಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲು ಕೋರಿ ಅರ್ಜಿ ಸಲ್ಲಿಸಿದ್ದರು. ಅವುಗಳನ್ನು ನ್ಯಾಯಾಲಯ ಪುರಸ್ಕರಿಸಿತು. ನಂತರ ದರ್ಶನ್ ಸೇರಿ ಏಳು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ವಿಚಾರಣೆ ಫೆ.17ಕ್ಕೆ ಮುಂದೂಡಿತು.
