Headlines

ಮುಡಾ ಕೇಸಲ್ಲಿ ಬಿ ರಿಪೋರ್ಟ್‌ ಪ್ರಶ್ನಿಸಿ ಅರ್ಜಿ: ಸಿಎಂ, ಲೋಕಾಯುಕ್ತಕ್ಕೆ ನೋಟಿಸ್‌ | Muda Case Court Issues Notice To Cm Siddaramaiah And Lokayukta Over B Report Challenge Rav

ಮುಡಾ ಕೇಸಲ್ಲಿ ಬಿ ರಿಪೋರ್ಟ್‌ ಪ್ರಶ್ನಿಸಿ ಅರ್ಜಿ: ಸಿಎಂ, ಲೋಕಾಯುಕ್ತಕ್ಕೆ ನೋಟಿಸ್‌ | Muda Case Court Issues Notice To Cm Siddaramaiah And Lokayukta Over B Report Challenge Rav



ಮುಡಾ ಕೇಸಲ್ಲಿ ಬಿ ರಿಪೋರ್ಟ್‌ ಪ್ರಶ್ನಿಸಿ ಅರ್ಜಿ: ಸಿಎಂ, ಲೋಕಾಯುಕ್ತಕ್ಕೆ ನೋಟಿಸ್‌ | Muda Case Court Issues Notice To Cm Siddaramaiah And Lokayukta Over B Report Challenge Rav

ಮುಡಾ ಸೈಟ್‌ ಅಕ್ರಮ ಹಂಚಿಕೆ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ಕೋರ್ಟ್‌ ಅಂಗೀಕರಿಸಿತ್ತು. ಈ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಹಿನ್ನೆಲೆ, ಹೈಕೋರ್ಟ್‌ ಇದೀಗ ಸಿಎಂ ಸಿದ್ದರಾಮಯ್ಯಗೆ ನೋಟೀಸ್ ನೀಡಿದೆ.

ಬೆಂಗಳೂರು: ಮುಡಾ ಸೈಟ್‌ ಅಕ್ರಮ ಹಂಚಿಕೆ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ ‘ಬಿ’ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ಕೋರ್ಟ್‌ (ಇ.ಡಿ.)ನ ಕ್ರಮ ಪ್ರಶ್ನಿಸಿರುವ ಅರ್ಜಿ ಸಂಬಂಧ ಲೋಕಾಯುಕ್ತ, ಇ.ಡಿ. ಹಾಗೂ ಸಿದ್ದರಾಮಯ್ಯ ಮತ್ತವರ ಕುಟುಂಬದವರಿಗೆ ಹೈಕೋರ್ಟ್‌ ಗುರುವಾರ ನೋಟಿಸ್‌ ಜಾರಿ ಮಾಡಿದೆ. 

ಈ ಸಂಬಂಧ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ, ನ್ಯಾ. ಎಸ್‌.ಸುನೀಲ್‌ ದತ್‌ ಯಾದವ್‌ ಅವರ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಸ್ನೇಹಮಯಿ ಪರ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್‌ ಅವರು, ಮುಡಾ ಕೇಸಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್‌ ವಿಚಾರಣಾ ಸಮಿತಿ ವರದಿಯಂತಿದೆ ಎಂದು ಆಕ್ಷೇಪಿಸಿದರು. ವಾದ ಆಲಿಸಿದ ನ್ಯಾಯಪೀಠ, ಸಂಬಂಧಪಟ್ಟವರಿಗೆ ನೋಟಿಸ್‌ ನೀಡಿ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ಮುಂದೂಡಿಕೆ:

ಈ ವಾದ ಆಲಿಸಿದ ನ್ಯಾಯಪೀಠ, ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ, ಇ.ಡಿ.ಗೆ ನೋಟಿಸ್‌ ಜಾರಿ ಮಾಡಿತು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಹಾಗೂ ಪ್ರಕರಣದ ಕೇಂದ್ರವಾಗಿರುವ ವಿವಾದಿತ ಭೂಮಿ ಮಾಲೀಕ ಜೆ.ದೇವರಾಜು ಅವರಿಗೆ ನ್ಯಾಯಾಲಯ ತುರ್ತು ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿತು.

ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಹೀಗಾಗಿ, ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಸಲ್ಲಿಸಿರುವ ʼಬಿʼ ರಿಪೋರ್ಟ್‌ ಅನ್ನು ಪಡೆದು ಪರಿಶೀಲಿಸಬೇಕು. ʼಬಿʼ ರಿಪೋರ್ಟ್ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೆ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸ್ನೇಹಮಯ ಕೃಷ್ಣ ಕೋರಿದ್ದಾರೆ.

ಪ್ರಕರಣವೇನು?:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ.464ರ 3 ಎಕರೆ 16 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡು, ಅದರ ಬದಲಿಗೆ ಸುಮಾರು 56 ಕೋಟಿ ರು. ಮೌಲ್ಯದ 14 ನಿವೇಶನಗಳನ್ನು ಮುಡಾ ಅಕ್ರಮವಾಗಿ ಹಂಚಿಕೆ ಮಾಡಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಹೀಗಾಗಿ, ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ 2024ರ ಜುಲೈ 3ರಂದು ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು. ನಂತರ ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ, 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ.19ರಂದು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ್ದ ಹೈಕೋರ್ಟ್, ಪೊಲೀಸ್‌ ತನಿಖೆಗೆ ಅನುಮತಿಸಿ 2024ರ ಸೆಪ್ಟೆಂಬರ್‌ 24ರಂದು ಆದೇಶಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು.

– ಪ್ರಕರಣದಲ್ಲಿ ಬಿ ರಿಪೋರ್ಟ್‌ ಸಲ್ಲಿಸಿದ್ದ ಲೋಕಾಯುಕ್ತ

– ರಿಪೋರ್ಟ್‌ ಅಂಗೀಕರಿಸಿದ್ದ ಜನಪ್ರತಿನಿಧಿಗಳ ಕೋರ್ಟ್

– ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ



Source link

Leave a Reply

Your email address will not be published. Required fields are marked *