
ಬೆಂಗಳೂರು, ಮಾರ್ಚ್ 30: ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ತಜ್ಞ ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗೆ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಹ ಇದೇ ಅವಧಿಯಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 39-40 ಡಿಗ್ರಿ ಸೆಲ್ಸಿಯಸ್ ತಲುಪುವ ಸಂಭವವಿದೆ. ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ 37-39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ತಾಪಮಾನದ ನಿರೀಕ್ಷೆಯಿದೆ. ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ