
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಬರಮಾಡಿಕೊಂಡರು.
ಬೆಂಗಳೂರು (ಏ.1): ತುಮಕೂರಿನ ಸಿದ್ದಗಂಗಾ ಮಠದಲ್ಲಿ ಏ.1ರಂದು ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು. ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
– ಇಂದು ತುಮಕೂರಲ್ಲಿ ನಡೆಯಲಿದೆ ಕಾರ್‍ಯಕ್ರಮ
ಈ ವೇಳೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಸೇರಿ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು. ಬಳಿಕ ರಾಷ್ಟ್ರಪತಿಗಳು ಲೋಕ ಭವನಕ್ಕೆ ತೆರಳಿ ವಾಸ್ತವ್ಯ ಹೂಡಿದರು. ಬುಧವಾರ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮ ನಡೆಯಲಿದೆ.