
ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ ಶುರುವಾಗಲಿದ್ದು, 5 ಜಿಲ್ಲೆಗಳಿಗೆ ರೆಡ್, 6 ಜಿಲ್ಲೆಗಳು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ ನೋಡಿ.
ಶಿವಮೊಗ್ಗ/ಚಿಕ್ಕಮಗಳೂರು/ಉತ್ತರ ಕನ್ನಡ/ಕೊಡಗು/ಹಾಸನ (ಆ.17): ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ತೀವ್ರಗೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಭಾರಿ ಮಳೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ನಾಳೆ (ಆಗಸ್ಟ್ 18) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿಯೂ ಕೆಲವೆಡೆ ಶಾಲೆಗಳು, ಇನ್ನು ಕೆಲವೆಡೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಿದ್ದು, ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ, ಮಕ್ಕಳು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ನದಿ ಮತ್ತು ಹಳ್ಳಗಳ ಸಮೀಪ ಹೋಗದಂತೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಂದ ದೂರವಿರುವಂತೆ ಸೂಚಿಸಲಾಗಿದೆ.
ಜಿಲ್ಲಾಡಳಿತವು ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧವಾಗಿದ್ದು, ಸಾರ್ವಜನಿಕರು ಹವಾಮಾನ ಇಲಾಖೆಯ ನಿಯಮಿತ ವರದಿಗಳನ್ನು ಗಮನಿಸುತ್ತಿರುವಂತೆ ಮನವಿ ಮಾಡಿದೆ. ಭಾರಿ ಮಳೆಯಿಂದಾಗಿ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಗಳೂ ಇರುವುದರಿಂದ, ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಹೋಗುವಂತೆ ಸಲಹೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 2 ದಿನ ಶಾಲೆ ಕಾಲೇಜಿಗೆ ರಜೆ:
ಕರಾವಳಿ ಜಿಲ್ಲೆಯಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ, ಜಿಲ್ಲಾಡಳಿತದಿಂದ ಶಾಲೆ ಕಾಲೇಜುಗಳಿಗೆ 2 ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೊಯಿಡಾ ಮತ್ತು ದಾಂಡೇಲಿ ಸೇರಿ 10 ತಾಲೂಕುಗಳಿಗೆ ಈ ರಜೆ ಅನ್ವಯವಾಗಲಿದೆ. ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.18ರಿಂದ ಆಗಸ್ಟ್ 19ರವರೆಗೆ (2 ದಿನಗಳು) ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರಜೆ:
ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಲ್ಲಿ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ರಜೆ:
ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ನಾಳೆ ಅಂದರೆ ಸೋಮವಾರ (ಆ.18ರಂದು) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಹಾಸನದ 3 ತಾಲೂಕುಗಳಿಗೆ ಮಾತ್ರ ರಜೆ:
ಇನ್ನು ಮಲೆನಾಡು ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಹಾಸನ ಜಿಲ್ಲೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಆದ್ದರಿಂದ ಭಾರೀ ಮಳೆಯನ್ನು ಪಡೆಯುವ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಮಕ್ಕಳು ಮಳೆ ಬೀಳುವ ವೇಳೆ ಎಲ್ಲಿಯೂ ಹೊರಗೆ ಹೋಗದಂತೆ, ಕೆರೆ, ಕಾಲುವೆ, ಹಳ್ಳ ಅಥವಾ ನದಿ ತೀರಗಳಲ್ಲಿ ಆಟವಾಡದಂತೆ ಮುಂಜಾಗ್ರತೆ ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.