‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಬೇಕಾದ ಭೂಮಿಕೆ ಸಿದ್ಧತೆಗಾಗಿ ಆಡಳಿತಾರೂಢ ಕಾಂಗ್ರೆಸ್‌ನ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸಿದ್ದರು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು (ಜು.03): ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಬೇಕಾದ ಭೂಮಿಕೆ ಸಿದ್ಧತೆಗಾಗಿ ಆಡಳಿತಾರೂಢ ಕಾಂಗ್ರೆಸ್‌ನ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸಿದ್ದರು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬುಧವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಹೆಚ್ಚಾಗಲಿದ್ದು, ಕುದುರೆ ವ್ಯಾಪಾರವೂ ಜೋರಾಗಿ ನಡೆಯಲಿದೆ. ರಾಜ್ಯಪಾಲರು ಈ ಬಗ್ಗೆ ಗಮನಿಸಬೇಕು ಎಂದು ಮನವಿ ಮಾಡಿದರು.
ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟು ರಾಜ್ಯದ ಭ್ರಷ್ಟ ಸರ್ಕಾರ ನೆಲಕಚ್ಚಿದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ ಎಂದರು. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನೂರು ಜನ ಶಾಸಕರ ಬೆಂಬಲ ಇದೆ. ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆ ಸೇರಿದಂತೆ ಹಲವು ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪರಿಸ್ಥಿತಿ ದಿನೇದಿನೇ ಕೈಮೀರಿ ಹೋಗುತ್ತಿದೆ. ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇ ದಿನೇ ಹೆಚ್ಚಾಗಿದೆ. ಇದರ ಪರಿಣಾಮ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಹರಿಹಾಯ್ದರು. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರವು ದಿನಬಳಕೆ ವಸ್ತುಗಳ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದ್ದು, ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದರು.
ಹಾಸನ ಜಿಲ್ಲೆಗೆ ಮಾತ್ರ ಲಸಿಕೆ ನೀಡಿತ್ತೆ?: ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ 35ರಿಂದ 40 ಜನರು ಸಾವನ್ನಪ್ಪಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣ ಎಂಬ ಮುಖ್ಯಮಂತ್ರಿಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಇದೊಂದು ಬೇಜವಾಬ್ದಾರಿ ಹೇಳಿಕೆ. ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ? ದೇಶದ ಸುಮಾರು 80 ಕೋಟಿ ಜನರಿಗೆ ಸೇರಿದಂತೆ ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಿಗೂ ಕೋವಿಡ್ ಲಸಿಕೆ ರಫ್ತು ಮಾಡಲಾಗಿದೆ. ಹಾಸನದ ಸಾವುಗಳ ಸಂಬಂಧ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮರ್ಪಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ತುರ್ತಾಗಿ ಸಭೆ ಕರೆದು ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಔಷಧಿ ಸಿದ್ಧವಾಗಿ ಇಟ್ಟುಕೊಳ್ಳುವ ಕಡೆ ಗಮನಿಸಬೇಕು. ಅದನ್ನು ಬಿಟ್ಟು ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಹೇಳಿದರು.