
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಅಂಕೋಲಾ: ಎಥನಾಲ್ ದ್ರಾವಣ ತುಂಬಿಕೊಂಡು ಬೆಳಗಾವಿಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಂಚಿನಬಾಗಿಲ ಬಳಿ ಗುರುವಾರ ನಡೆದಿದೆ. ಸ್ಫೋಟದ ತೀವ್ರತೆಗೆ ಟ್ಯಾಂಕರ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನಿಗೂ ಬೆಂಕಿ ತಗುಲಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಟ್ಯಾಂಕರ್ ಚಾಲಕ ಮುರುಗೇಶ ಚಿಕಿತ್ಸೆ ಪಡೆಯುತ್ತಿದ್ದು, ತುಮಕೂರಿನ ಚಿಕ್ಕನಾಯಕನಹಳ್ಳಿಯವರೆಂದು ತಿಳಿದುಬಂದಿದೆ.
ಮರ-ಗಿಡಗಳಿಗೂ ವ್ಯಾಪಿಸಿದ ಬೆಂಕಿ
ಟ್ಯಾಂಕರ್ ಸ್ಫೋಟಗೊಂಡ ತಕ್ಷಣ ಸುತ್ತಲಿನ ಮರ-ಗಿಡಗಳಿಗೂ ಬೆಂಕಿ ವ್ಯಾಪಿಸಿದ್ದು, ಪರಿಸ್ಥಿತಿ ಗಂಭೀರಗೊಂಡಿತ್ತು. ಬಳಿಕ ಅಂಕೋಲಾ ಹಾಗೂ ಕಾರವಾರದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಐಎನ್‌ಎಸ್ ವಜ್ರಕೋಶದ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ವೇಳೆ ರಸ್ತೆ ಸಂಪೂರ್ಣ ಸ್ಥಗಿತವಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ಥಗೊಂಡಿತು. ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ–ಯಲ್ಲಾಪುರ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಹೆದ್ದಾರಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಘಟನಾ ಸ್ಥಳಕ್ಕೆ ಅಂಕೋಲಾ ತಹಸೀಲ್ದಾರ್ ನೋರೊನಾ ಹಾಗೂ ಡಿವೈಎಸ್ಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.