
ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಎಬಿವಿಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಉಂಟಾಗಿ, ಪೊಲೀಸರು 21 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದರು.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಿಕ್ಕನಹಳ್ಳಿ ಬಳಿ ಇರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ (Azim Premji University) ಕ್ಯಾಂಪಸ್‌ನಲ್ಲಿ ಸೈನ್ಯ ವಿರೋಧಿ ಹಾಗೂ ದೇಶವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪದ ಹಿನ್ನೆಲೆ ಭಾರೀ ಪ್ರತಿಭಟನೆ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸಂಘದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಫೆಬ್ರವರಿ 26, 27 ಮತ್ತು 28ರಂದು ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ದೇಶವಿರೋಧಿ ಚಿಂತನೆಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ ABVP ಕಾರ್ಯಕರ್ತರು, ತ್ರಿವರ್ಣ ಧ್ವಜ ಹಿಡಿದು ಕಾಲೇಜು ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಿದರು. ಈ ವೇಳೆ ವಿಶ್ವವಿದ್ಯಾಲಯದ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.
ದೇಶ ಸೇನೆಯನ್ನು ಹಿಂಸಾಚಾರಿಗಳಂತೆ ಬಿಂಬಿಸುವ ಕಾರ್ಯಕ್ರಮ
ABVP ಆರೋಪದಂತೆ, AISA ಪ್ರಾಯೋಜಿತ SPARK ವಿದ್ಯಾರ್ಥಿ ಸಂಘಟನೆಯು ಸಂವಾದ ಕಾರ್ಯಕ್ರಮಗಳ ಹೆಸರಿನಲ್ಲಿ ಸೈನ್ಯ ವಿರೋಧಿ, ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಬೆಂಬಲ ನೀಡುವ ಹಾಗೂ ನಕ್ಸಲ್–ಮಾವೋವಾದಿ ಚಿಂತನೆಗಳನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಲವು ವರ್ಷಗಳಿಂದ ಆಯೋಜಿಸುತ್ತಿದೆ. ಭಾರತೀಯ ಸೇನೆಯನ್ನು ಹಿಂಸಾಚಾರಿಗಳಂತೆ ಬಿಂಬಿಸುವುದು, ಕಾಶ್ಮೀರ ಭಾರತದ ಭಾಗವಲ್ಲ ಎಂಬಂತಹ ಘೋಷಣೆಗಳು ದೇಶದ ಸಮಗ್ರತೆಗೆ ಧಕ್ಕೆ ತರುತ್ತವೆ ಎಂದು ABVP ಆರೋಪಿಸಿದೆ.
ಪ್ರತಿಭಟನೆಯ ವೇಳೆ ABVP ಹಾಗೂ SPARK ಸಂಘಟನೆಗಳ ವಿದ್ಯಾರ್ಥಿಗಳ ನಡುವೆ ಪರಸ್ಪರ ಮಾತಿನ ಚಕಮಕಿ ನಡೆಯಿತು. SPARK ಸಂಘಟನೆಯ ಕೆಲವು ವಿದ್ಯಾರ್ಥಿಗಳು ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿದ್ದು, ಈ ವೇಳೆ ABVP ಕಾರ್ಯಕರ್ತರತ್ತ ಚಪ್ಪಲಿ ತೂರಿದ ಘಟನೆ ಕೂಡ ನಡೆದಿದೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಕೈಮೀರದಂತೆ ತಡೆಯಲು ಸರ್ಜಾಪುರ ಪೊಲೀಸರು ಮಧ್ಯಪ್ರವೇಶಿಸಿ ಮುಂಜಾಗ್ರತಾ ಕ್ರಮವಾಗಿ ABVPನ 21 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡರು. ನಂತರ ಅವರನ್ನು ಜಿಗಣಿ ಸಾರ್ವಜನಿಕ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು. ಈ ವೇಳೆ ಜಿಗಣಿ ಪುರಸಭೆ ಸದಸ್ಯರಾದ ಪುನೀತ್ ಮತ್ತು ಪ್ರವೀಣ್ ಸೇರಿದಂತೆ ಹಲವು ಜನಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಸಾಥ್ ನೀಡಿದರು.
ABVPನ 21 ವಿದ್ಯಾರ್ಥಿಗಳು ಅರೆಸ್ಟ್
ಬಂಧಿತ ವಿದ್ಯಾರ್ಥಿಗಳನ್ನು ಆನೇಕಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಎಲ್ಲಾ 21 ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು ಮಾಡಿದರು. ಮಧ್ಯರಾತ್ರಿ ಸುಮಾರು 3.30ರ ವೇಳೆಗೆ ABVP ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಯಿತು. ಈ ಪ್ರಕ್ರಿಯೆ ವೇಳೆ ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಅವರು ವಿದ್ಯಾರ್ಥಿಗಳಿಗೆ ನೆರವು ನೀಡಿದರು.
ಇದರ ನಡುವೆಯೇ ABVP ಸಂಘಟನೆಯು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಪತ್ರ ಬರೆದು, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಮಾನ್ಯತೆ ರದ್ದುಗೊಳಿಸುವಂತೆ ಮನವಿ ಮಾಡಿದೆ. ಜೊತೆಗೆ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ AISA ಹಾಗೂ SPARK ಸಂಘಟನೆಗಳನ್ನು ತಕ್ಷಣವೇ ನಿಷೇಧಿಸಬೇಕು ಮತ್ತು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಪ್ರಮುಖರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಇನ್ನೊಂದೆಡೆ, ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿಗಳು ABVP ಮತ್ತು RSS ವಿರುದ್ಧವೂ ಪ್ರತಿಭಟನೆ ನಡೆಸಿದ್ದು, ABVPನ್ನು ನಿಷೇಧಿಸುವಂತೆ ಸರ್ಕಾರಕ್ಕೆ ದೂರು ನೀಡಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಘಟನೆಗಳ ಹಿನ್ನೆಲೆ ವಿಶ್ವವಿದ್ಯಾಲಯದ ಬಳಿ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಹಾಗೂ ಡಿವೈಎಸ್‌ಪಿ ಮಲ್ಲೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಒಟ್ಟಾರೆ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ಈ ಪ್ರತಿಭಟನೆಗಳು ದೇಶದಾದ್ಯಂತ ಸುದ್ದಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.