
ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಕೇವಲ ಸಂಗ್ರಹಿಸಿಡುವುದು ಕೂಡ ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಇಂತಹ ಚಿತ್ರಗಳನ್ನು ಯಾರಿಗೂ ಕಳುಹಿಸಿಲ್ಲ ಎಂಬ ಕಾರಣಕ್ಕೆ ವಿನಾಯಿತಿ ಸಿಗುವುದಿಲ್ಲ ಎಂದಿದೆ.
ಬೆಂಗಳೂರು (ಮಾ.12): ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್ ಪೋನ್‌ನಲ್ಲಿ ಸಂಗ್ರಹಿಸಿಟ್ಟಿರುವುದು ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ (ಐಟಿ) ಅಪರಾಧವಾಗಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಮೊಬೈಲ್‌ನಲ್ಲಿ ಹೇರಳವಾಗಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಕಾಯ್ದೆ-2012ರ ಸೆಕ್ಷನ್ 15 ಮತ್ತ ಐಟಿ ಕಾಯ್ದೆ-2000ರ ಸೆಕ್ಷನ್ 67(ಬಿ) ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಚೊಟ್ಟೂರುಪುರ ಕಿಲ್ಲನೂರಿನ ಪಿ.ಜೆ.ಬಿನೋಜ್ (38) ಎಂಬಾತ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ‘ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್ ಪೋನ್‌ನಲ್ಲಿ ಸಂಗ್ರಹಿಸಲಾಗಿದೆಯಷ್ಟೆ. ಆದರೆ, ಅದನ್ನು ಯಾರಿಗೂ ಕಳುಹಿಸಿಲ್ಲ. ಹಾಗಾಗಿ, ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಅಪರಾಧಗಳು ತನಗೆ ಅನ್ವಯವಾಗುವುದಿಲ್ಲ’ ಎಂಬ ಅರ್ಜಿದಾರನ ವಾದ ತಿರಸ್ಕರಿಸಿದೆ.
ಅಲ್ಲದೆ ಮಕ್ಕಳ ಅಶ್ಲೀಲ ಚಿತ್ರ ಹಾಗೂ ವಿಡಿಯೋಗಳನ್ನು ಪ್ರಸರಣ ಮಾಡುವುದಷ್ಟೇ ಅಲ್ಲ, ಪ್ರಸಾರವಾಗುವ ಸಾಮರ್ಥ್ಯ ಹೊಂದಿರುವ ಮಕ್ಕಳ ಅಶ್ಲೀಲ ಪೋಟೋ ಹಾಗೂ ವಿಡಿಯೋ ಸಂಗ್ರಹಿಸಿಡುವುದು ಸಹ ಪೋಕ್ಸೊ ಕಾಯ್ದೆಯ ಸೆಕ್ಷನ್ 15ರ ಅಡಿ ಅಪರಾಧವಾಗುತ್ತದೆ. ಈ ಕುರಿತು ಸುಪ್ರೀಂ ಕೋರ್ಟ್ ಸಹ ತೀರ್ಪು ನೀಡಿದೆ ಎಂದು ಪೀಠ ಸ್ಪಷ್ಟಪಡಿಸಿತು.
ಅರ್ಜಿದಾರರು ತಮ್ಮ ಫೋನ್‌ನಿಂದ ಮಕ್ಕಳ ಅಶ್ಲೀಲ ಚಿತ್ರ ಮತ್ತು ಪೋಟೋ ರವಾನಿಸಿಲ್ಲ ಎಂಬ ಕಾರಣಕ್ಕಾಗಿ ಅವರು ಅಪರಾಧಕ್ಕೆ ಹೊಣೆಗಾರರಾಗಿರುವುದಿಲ್ಲ ಎಂದು ಅರ್ಥೈಸಲಾಗದು. ಈಗಾಗಲೇ ಅರ್ಜಿದಾರನ ವಿರುದ್ಧ ದೋಷಾರೋಪಗಳನ್ನು ಹೊರಡಿಸಿದೆ. ಸಾಕ್ಷ್ಯಧಾರಗಳು ವಿಚಾರಣೆ ಹಂತದಲ್ಲಿ ಪ್ರಕರಣವಿದೆ. ಆತ ಪೂರ್ಣ ಪ್ರಮಾಣದ ವಿಚಾರಣೆಯಿಂದಲೇ ದೋಷಮುಕ್ತವಾಗಿ ಬರಲಿ. ಈ ಹಂತದಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಯಲ್ಲಿ ಮಧ್ಯಪ್ರವೇಶಿಸಲಾಗದು ಎಂದು ತಿಳಿಸಿದ ಪೀಠ ಅರ್ಜಿ ವಜಾಗೊಳಿಸಿದೆ.
ಪ್ರಕರಣದ ವಿವರ:
ಅಪರಾಧ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಅರ್ಜಿದಾರರ ಮೊಬೈಲ್ ಫೋನ್ ಅನ್ನು ಪೊಲೀಸರು ತನಿಖೆ ವೇಳೆ ವಶಕ್ಕೆ ಪಡೆದಿದ್ದರು. ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿತ್ತು. ಈ ವೇಳೆ ಮೊಬೈಲ್ ಸ್ಟೋರೇಜ್ ಬಾಕ್ಸ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಹೇರಳವಾಗಿರುವುದು ಪತ್ತೆಯಾಗಿತ್ತು.
ಇದರಿಂದ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು, ಅರ್ಜಿದಾರನ ವಿರುದ್ಧ ಐಟಿ ಕಾಯ್ದೆ ಸೆಕ್ಷನ್ 67(ಬಿ) ಮತ್ತು ಪೋಕ್ಸೋ ಕಾಯ್ದೆ ಸೆಕ್ಷನ್ 15ರ ಅನ್ವಯ