ವಾಲ್ಮೀಕಿ ನಿಗಮದ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಿದ್ದು ಬಿಜೆಪಿಯ ಹೋರಾಟಕ್ಕೆ ಸಂದ ಜಯ ಎಂದು ಹೇಳಿರುವ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹೈಕೋರ್ಟ್ಗೆ ಅರ್ಜಿ ಹಾಕಿದವರು ನಮ್ಮ ಪಕ್ಷದವರೇ ಎಂದು ಪ್ರತಿಪಾದಿಸಿದ್ದಾರೆ.
ಬೆಂಗಳೂರು (ಜು.03): ವಾಲ್ಮೀಕಿ ನಿಗಮದ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಿದ್ದು ಬಿಜೆಪಿಯ ಹೋರಾಟಕ್ಕೆ ಸಂದ ಜಯ ಎಂದು ಹೇಳಿರುವ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹೈಕೋರ್ಟ್ಗೆ ಅರ್ಜಿ ಹಾಕಿದವರು ನಮ್ಮ ಪಕ್ಷದವರೇ ಎಂದು ಪ್ರತಿಪಾದಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ. ಇದರಲ್ಲಿ ಇನ್ನೂ ಕೂಡ ದೊಡ್ಡ ತಲೆಗಳು ಉರುಳಲಿವೆ ಎಂದರು.
ರಾಜ್ಯದ ಪರಿಶಿಷ್ಟ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ನ್ಯಾಯಕ್ಕೆ ಬಳಕೆಗೆ ಮೀಸಲಿಟ್ಟ ₹187 ಕೋಟಿಯನ್ನು ಪಕ್ಕದ ತೆಲಂಗಾಣದಲ್ಲಿ ಬಳಸಿಕೊಂಡ ವಾಲ್ಮೀಕಿ ನಿಗಮದ ಹಗರಣ ನಡೆದಿತ್ತು. ಸಾವಿರಾರು ಬ್ಯಾಂಕ್ ಖಾತೆಗಳನ್ನು ತೆರೆದು ಬಾರ್, ಜ್ಯುವೆಲ್ಲರಿ ಶಾಪ್, ಲೋಕಸಭಾ ಚುನಾವಣೆಗೆ ಈ ಹಣ ದುರ್ಬಳಕೆ ಆಗಿತ್ತು. ಚಂದ್ರಶೇಖರ್ ಎಂಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟಿನಲ್ಲಿ ಎಲ್ಲವನ್ನೂ ಉಲ್ಲೇಖಿಸಿದ್ದರು ಎಂದು ಹೇಳಿದರು.
ಬಿಜೆಪಿ ತೀವ್ರ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳು ಅನಿವಾರ್ಯವಾಗಿ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕಾಗಿ ಬಂತು. ಈಗ ಹೇಗಾದರೂ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಲು ಮುಖ್ಯಮಂತ್ರಿಗಳು ಪರದಾಡುತ್ತಿದ್ದರು. ಈ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿಗಳು ಭಾಗಿಯಾದ್ದು ಎಲ್ಲರಿಗೂ ತಿಳಿದಿದೆ. ಹಣಕಾಸು ಇಲಾಖೆ ಅನುಮತಿ ಇಲ್ಲದೆ ಹಣ ಹೊರರಾಜ್ಯಕ್ಕೆ ಹೋಗಲು ಸಾಧ್ಯವಿರಲಿಲ್ಲ ಎಂದರು.
ಶೀಘ್ರ ನಿರ್ಧಾರ: ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲಾ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು ಹಾಗೂ ಪಕ್ಷದ ಮುಖಂಡರ ಅಭಿಮತ ಪಡೆದ ಬಳಿಕ ಅಂತಿಮವಾಗಿ ಯಾರನ್ನು ರಾಜ್ಯಾಧ್ಯಕ್ಷರಾಗಿ ಮಾಡಿದರೆ ಒಳ್ಳೆಯದು ಎಂದು ಪಕ್ಷ ಶೀಘ್ರದಲ್ಲೇ ನಿರ್ಧರಿಸುವ ವಿಶ್ವಾಸವಿದೆ ಎಂದರು.
ನಾನು ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿರುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತನಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ. ಕೇಂದ್ರ ಮತ್ತು ರಾಷ್ಟ್ರೀಯ ನಾಯಕರಿಗೆ ಕೊಡಬೇಕಾದ ಮಾಹಿತಿ ಕೊಡುತ್ತಾ ಬಂದಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಕೇಂದ್ರ ಸಚಿವ ಅಮಿತ್ ಶಾ ಅವರ ಭೇಟಿ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಮತ್ತು ಪಕ್ಷದ ಕೆಲ ಹಿರಿಯ ಮುಖಂಡರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 20-25 ನಿಮಿಷಗಳ ಕಾಲ ರಾಜ್ಯದ ರಾಜಕಾರಣ, ಪ್ರಚಲಿತ ವಿದ್ಯಾಮಾನಗಳ ಕುರಿತು ಚರ್ಚಿಸಿರುವುದಾಗಿ ಹೇಳಿದರು.