ವಂಚನೆ ಆರೋಪ ಎದುರಿಸುತ್ತಿರುವ ಮಹಿಳೆಚಿತ್ರದ ಕ್ರೆಡಿಟ್ ಮೂಲ: tv9
ದೇವನಹಳ್ಳಿ, ಜನವರಿ 30: ಪ್ರೀತಿ, ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ (ಬೆಂಗಳೂರು ಗ್ರಾಮಾಂತರ) ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು, ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು.
ಮೂವರನ್ನು ಮದುವೆಯಾಗಿರುವ ಈಕೆ, ತನ್ನ ಇಬ್ಬರು ಪತಿಯರಿಗೆ ರೂಪಾಯಿ ರೂಪಾಯಿ ಪಂಗನಾಮ ಹಾಕಿದ್ದಾಳೆ. ಈ ಬಗ್ಗೆ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ.
ಬುಲೆಟ್ ಓಡಿಸಲು ಬರಲ್ಲ ಎಂದು ಮೊದಲ ಪತಿಗೆ ಕೈಕೊಟ್ಟ ಸುಧಾರಾಣಿ!
ಸುಧಾರಾಣಿ ಮೊದಲು ವೀರೇಗೌಡ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, ದಾಂಪತ್ಯ ಜೀವನದ ನಡುವೆಯೇ ಪತಿಗೆ ‘ಕಾರು ಮತ್ತು ಬುಲೆಟ್ ಓಡಿಸಲು ಬರಲ್ಲ’ ಎಂಬ ಕ್ಷುಲ್ಲಕ ಕಾರಣ ನೀಡಿ, ಮಕ್ಕಳನ್ನು ಹಾಗೂ ವೀರೇಗೌಡರನ್ನು ತೊರೆದು ಹೋಗಿದ್ದಳು.
ಎರಡನೇ ಪತಿಗೆ 20 ಲಕ್ಷ ರೂ. ಪಂಗನಾಮ!
ಮೊದಲ ಪತಿಯಿಂದ ದೂರಾದ ಸುಧಾರಾಣಿ, ನಂತರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬುವವರನ್ನು ಸಂಪರ್ಕಿಸಿದಳು. ಗಂಡ ತೀರಿಹೋಗಿದ್ದಾರೆ ಎಂದು ಸುಳ್ಳು ಹೇಳಿ ಆತನನ್ನು ದೇವಸ್ಥಾನದಲ್ಲಿ ಸರಳವಾಗಿ ಮದುವೆಯಾಗಿದ್ದಳು. ಸುಮಾರು ಒಂದೂಕಾಲು ವರ್ಷಗಳ ಕಾಲ ಅನಂತಮೂರ್ತಿ ಜೊತೆ ಸಂಸಾರ ಮಾಡಿದ್ದಳು. ಈ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿದೆ.
ಅನಂತಮೂರ್ತಿಗೆ ಪಂಗನಾಮ ಹಾಕಿದ ನಂತರ ಮೂರನೇ ಮದುವೆ!
ಅನಂತಮೂರ್ತಿಯಿಂದ ಹಣ ಪಡೆದ ನಂತರ ಆತನನ್ನೂ ತೊರೆದಿರುವ ಸುಧಾರಾಣಿ, ಇದೀಗ ಕನಕಪುರ ಮೂಲದ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಈ ವಿಷಯ ತಿಳಿಯಬೇಕಾದರೆ ಮೊದಲ ಪತಿ ವೀರೇಗೌಡ ಮತ್ತು ಎರಡನೇ ಪತಿಮೂರ್ತಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗೆ ತೆರಳಿ ನ್ಯಾಯಕ್ಕಾಗಿ ಹಾಜರಾದರು.
ಇದನ್ನೂ ಓದಿ: ಹಲವಾರು ಯುವತಿಯರ ಜತೆ ಯುವಕನ ಕಾಮಕೇಳಿ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಸವದ್ ಬಂಧನ
ಈಕೆ ಕೇವಲ ಹಣಕ್ಕಾಗಿ ಶ್ರೀಮಂತರನ್ನು ಮತ್ತು ಅಮಾಯಕರನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಾಳೆ. ಇಂತಹ ಮಹಿಳೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಪತಿಯರು ಒತ್ತಾಯಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಪೊಲೀಸರು ಈ ಕುರಿತು ದೂರು ದಾಖಲಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ