ಬೆಂಗಳೂರು: ಜನವರಿ 11ರಿಂದ ನ್ಯೂಜಿಲೆಂಡ್ ಎದುರು ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿಯಾಡಲಿದೆ. ಈ ಸರಣಿಯಿಂದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದು, ಅವರ ಏಕದಿನ ಕ್ರಿಕೆಟ್ ವೃತ್ತಿಬದುಕು ಮುಗಿಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.

ಇದೇ ಜನವರಿ 11ರಿಂದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು 15 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಮುಂಬರುವ 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಟೀಮ್ ಮ್ಯಾನೇಜ್‌ಮೆಂಟ್ ಈಗಿನಿಂದಲೇ ತಯಾರಿ ನಡೆಸಿದ್ದು, ಯುವ ಹಾಗೂ ಅನುಭವಿ ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಿದೆ.

ಆದರೆ ಈ ಸರಣಿಯ ಮೂಲಕ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಇಬ್ಬರು ಅನುಭವಿ ಕ್ರಿಕೆಟಿಗರಿಗೆ ಬಿಸಿಸಿಐ ಆಯ್ಕೆ ಸಮಿತಿ ಶಾಕ್ ನೀಡಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದರು.

ಮೊಹಮ್ಮದ್ ಶಮಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಕೊನೆಯ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಪ್ರತಿಷ್ಠಿತ ಟೂರ್ನಿಯಲ್ಲಿ 9 ವಿಕೆಟ್ ಕಬಳಿಸುವ ಮೂಲಕ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿ ತಂಡ ಚಾಂಪಿಯನ್ ಆಗುವಲ್ಲಿ ಶಮಿ ಪ್ರಮುಖ ಪಾತ್ರ ವಹಿಸಿದ್ದರು.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಶಮಿ, ಭಾರತದ ವೇಗದ ಬೌಲಿಂಗ್ ವಿಭಾಗವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಇದಾದ ಬಳಿಕ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದ ಶಮಿ, ಇದೀಗ ಫಿಟ್ನೆಸ್ ಸಾಧಿಸಿ ದೇಶಿ ಕ್ರಿಕೆಟ್‌ನಲ್ಲಿ ಮಿಂಚಿದ್ದರು.

ಮೊಹಮ್ಮದ್ ಶಮಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಹೀಗಿದ್ದೂ ಶಮಿ ಬದಲಿಗೆ ಯುವ ಆಟಗಾರರಿಗೆ ಆಯ್ಕೆ ಸಮಿತಿ ಮಣೆ ಹಾಕಿದ್ದು, ಶಮಿ ಏಕದಿನ ಕ್ರಿಕೆಟ್ ವೃತ್ತಿಜೀವನ ಮುಗಿಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.

ಇನ್ನು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಲೇ ಬಂದಿರುವ ಕೇರಳ ಮೂಲದ ಸಂಜು ಸ್ಯಾಮ್ಸನ್ ಅವರಿಗೂ ಮತ್ತೊಮ್ಮೆ ಏಕದಿನ ತಂಡದಲ್ಲಿ ಸ್ಥಾನ ಸಿಗದೆ ಇರುವುದು ಅಚ್ಚರಿಗೆ ಕಾರಣವಾಗಿದೆ.

ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲೂ ಸಂಜು ಸ್ಯಾಮ್ಸನ್ ಆಕರ್ಷಕ ಶತಕ ಸಿಡಿಸಿ ತಾವು ಏಕದಿನ ಕ್ರಿಕೆಟ್ ಆಡಲು ರೆಡಿ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದರು. ಇದರ ಹೊರತಾಗಿಯೂ ಸಂಜು ಬದಲಿಗೆ ರಿಷಭ್ ಪಂತ್‌ಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಸಂಜು ಸ್ಯಾಮ್ಸನ್ 2023ರ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರು ಕೊನೆಯ ಬಾರಿಗೆ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದಾದ ಬಳಿಕ ಏಕದಿನ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ 31 ವರ್ಷದ ಸಂಜು ಏಕದಿನ ಬದುಕು ಮುಗಿಯಿತಾ ಎನ್ನುವ ಪ್ರಶ್ನೆ ಶುರುವಾಗಿದೆ.

Source link
ಮುಗಿಯಿತಾ ಈ ಇಬ್ಬರು ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗರ ಏಕದಿನ ಕ್ರಿಕೆಟ್ ಬದುಕು?