ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (ವರ್ಗಾವಣೆ) ಮಾಡಬೇಕೆಂಬ ಸಿಎಂ ಸೂಚನೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿರುವ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ.ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ… pic.twitter.com/yr3kvPMF5o
– ಸಿದ್ದರಾಮಯ್ಯ (@ಸಿದ್ದರಾಮಯ್ಯ) ಫೆಬ್ರವರಿ 13, 2026
ಇನ್ನು ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಸೂಚಿಸಲಾಗಿದೆ.
ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್
ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್, ಎಐ ಯುಗದಲ್ಲಿ ವಾಟ್ಸ್ಆಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರೊಂದಿಗೆ ಹಂಚಿಕೊಳ್ಳುವುದು ಕೂಡ ಅಪರಾಧವೇ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಾಗಿದ್ದೇವೆ, ಸುಳ್ಳು ಸುದ್ದಿಗಳು ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.